ಯಾದಗಿರಿ:- ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕಾಗಿರುವ ಕಾರಣ ಮುಂದಿನ 7 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ರಣಭೀಕರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿಗ್ರಿ ಸೆಲ್ಸಿಯಸ್ ಹಾಗು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.
Leave feedback about this